ಮಂಗಳೂರು:ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 4,000 ಕೋಟಿಗೂ ಹೆಚ್ಚಿನ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ನಗರದ ಗೋಲ್ಡ್‌ಫಿಂಚ್ ಮೈದಾನದಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುತ್ತಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಡಳಿತ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದ ಒಂದು ಲಕ್ಷ ಫಲಾನುಭವಿಗಳು ಸಮಾವೇಶಕ್ಕೆ ಭಾಗವಹಿಸುವಂತಾಗಬೇಕು.ಸ್ಥಳೀಯ ಜನಪ್ರತಿನಿಧಿಗಳ ನೆರವು ಪಡೆದು, ಫಲಾನುಭವಿಗಳನ್ನು ಸಂಪರ್ಕಿಸಿ ಸಮಾವೇಶಕ್ಕೆ ಕರೆತರಲು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳು, ತಹಶೀಲ್ದಾರರು ಹೊಣೆವಹಿಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
ಪ್ರಧಾನಿ ಕಿಸಾನ್ ಸಮ್ಮಾನ್ ಫಲಾನುಭವಿಗಳು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ.ಎರಡು ವರ್ಷಗಳ ಫಲಾನುಭವಿಗಳ ಗ್ರಾಮವಾರು ಪಟ್ಟಿ ಶೀಘ್ರ ಸಿದ್ಧವಾಗಬೇಕು.ಸಮಾವೇಶದ ದಿನದಂದು ಮಧ್ಯಾಹ್ನ 2.30ರೊಳಗೆ ಎಲ್ಲರೂ ಸ್ಥಳದಲ್ಲಿ ಹಾಜರಿರುವಂತೆ ಮುತುವರ್ಜಿ ವಹಿಸಬೇಕು ಎಂದು ಸುನಿಲ್ ಕುಮಾರ್ ಹೇಳಿದರು. ಜಿಲ್ಲೆಗೆ 27 ಸಾವಿರ ಕೋಟಿ ರೂ.ಅನುದಾನ: 2014ರಿಂದ ಇಲ್ಲಿವರೆಗೆ ಸುಮಾರು ರೂ.27 ಸಾವಿರ ಕೋಟಿಗೂ ಅಧಿಕ ಅನುದಾನ ಕೇಂದ್ರದಿಂದ ಜಿಲ್ಲೆಗೆ ಲಭಿಸಿದೆ.ರಾಷ್ಟ್ರೀಯ ಹೆದ್ದಾರಿ, ವಿಮಾನ, ರೈಲ್ವೆ, ಬಂದರು ಸೇರಿದಂತೆ ಅನೇಕ ದೊಡ್ಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಪ್ಲಾಸ್ಟಿಕ್ ಪಾರ್ಕ್ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ, ಕಾರ್ಯಕ್ರಮ ಪ್ರಾರಂಭಕ್ಕೂ ಒಂದು ತಾಸು ಮುನ್ನ ಸ್ಥಳಕ್ಕೆ ಬಂದು ಸಹಕರಿಸಬೇಕು ಹಾಗೂ ವಾಹನಗಳ ನಿಲುಗಡೆ ವ್ಯವಸ್ಥೆಯ ಮಾಹಿತಿ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಕುಮಾರ್, ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶಕುಮಾರ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.