ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಜಿ ಕೆಟಗರಿ ನಿವೇಶನ ಅಕ್ರಮ ಹಂಚಿಕೆ;ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ವರ್ಗಾವಣೆ

0

ಬೆಂಗಳೂರು:ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಜಿ ಕೆಟಗರಿ ನಿವೇಶನ ಹಂಚಿಕೆ ಮಾಡಿದ್ದ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯನ್ನು 2021ರ ಅಕ್ಟೋಬರ್‌ನಲ್ಲಿ ಸುಪ್ರೀಂಕೋರ್ಟ್ ನಿರ್ಬಂಧಿಸಿತ್ತು.ಆದರೂ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ)ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಆರೆಂವಿ ಬಡಾವಣೆಯಲ್ಲಿ ಕೋಟ್ಯಂತರ ರೂ.ಮೌಲ್ಯದ ಬದಲಿ ನಿವೇಶನಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನಾಲ್ವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿತ್ತು.

ಡಾ|ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಈ ಸಂಬಂಧ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು, ಬಿಡಿಎ ಅಧಿಕಾರಿಗಳ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದೆ.ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ ಬಳಿಕ ಬಿಡಿಎ ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿ, ಆದೇಶವನ್ನು ಮಾರ್ಪಾಡು ಮಾಡುವಂತೆ ಮನವಿ ಸಲ್ಲಿಸಿತ್ತು.ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠವು, ನ್ಯಾಯಾಲಯದ ಆದೇಶ ಉಲ್ಲಂಸಿದ ಬಳಿಕ ಬಿಡಿಎ ಆಯುಕ್ತರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿತು.
ಜಿ ಕೆಟಗಿರಿ ನಿವೇಶನ ಹಂಚಿಕೆಯೆ ಅಕ್ರಮ ಎಂದು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಬಿಡಿಎ ಆಯುಕ್ತ ರಾಜೇಶ್ ಗೌಡ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು.ಅವರಿಗೆ ಸರ್ವೋಚ್ಚ ನ್ಯಾಯಾಲಯದ ಆದೇಶಗಳ ಬಗ್ಗೆ ಗೌರವವೇ ಇಲ್ಲ.ಇಂದಿನಿಂದ ಅವರು ಯಾವುದೆ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ ಎಂದು ಆದೇಶ ನೀಡಿತ್ತು.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿದೆ.ಅವರ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆಯನ್ನು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್ ಅವರಿಗೆ ವಹಿಸಲಾಗಿದೆ.

`ನಿವೇಶನ ವಾಪಸ್
ಪಡೆಯುತ್ತೇವೆ’
ಗಣ್ಯರಿಗೆ ಅಭಿವೃದ್ಧಿ ಹೊಂದಿದ ಪರ್ಯಾಯ ನಿವೇಶನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಗಂಭೀರವಾಗಿ ಪರಿಗಣಿಸಿವೆ.ಬಿಡಿಎದಲ್ಲಿರುವ ಕೆಳ ಹಂತದ ಅಧಿಕಾರಿಗಳು ಈ ವಿಚಾರದಲ್ಲಿ ಎಡವಟ್ಟು ಮಾಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಬಿಡಿಎ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಅವರ ಸಹಿತ ನಿವೇಶನ ಹಂಚಿಕೆಯಾದ ಎಲ್ಲರಿಂದ ನಿವೇಶನವನ್ನು ವಾಪಸ್ ಪಡೆಯುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here