ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ವನ ಮಹೋತ್ಸವ : ಎನ್‌ಎಸ್‌ಎಸ್-ಅರಣ್ಯ ಇಲಾಖೆ ಜಂಟಿ ಕಾರ್ಯಕ್ರಮ

0

ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಂಯುಕ್ತ ಆಶ್ರಯದಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ, ಬಂಟ್ವಾಳ ವಲಯದ ಉಪ ವಲಯ ಅರಣ್ಯಾಧಿಕಾರಿ ಶ್ರೀ ಕೃಷ್ಣ ಮಾತನಾಡಿ, “ಪರಿಸರ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಯಾವುದೇ ಒಂದು ಸಂಸ್ಥೆಯ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದರು. ಪರಿಸರ ದಿನಾಚರಣೆಯಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭೂಮಿಯನ್ನು ಸಂರಕ್ಷಿಸುವ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನರಸಿಂಹ ಭಟ್ ಎಚ್. ಅವರು, “ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸುವ ಮೂಲಕ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಈ ದಿನಾಚರಣೆಯ ಮುಖ್ಯ ಉದ್ದೇಶ” ಎಂದರು. ಬಳಿಕ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ವಿವಿಧ ಬಗೆಯ ಸಸಿಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಬಂಟ್ವಾಳ ವಲಯದ ಗಸ್ತು ಅರಣ್ಯ ಪಾಲಕರಾದ ರೇಖಾ ಹಾಗೂ ರವಿ ಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಕಚೇರಿ ಅಧೀಕ್ಷಕ ಸುಧಾಕರ್ ಸಿ.ಎಸ್., ಪ್ರಥಮ ದರ್ಜೆ ಸಹಾಯಕರಾದ ಹಮೀದ್ ಡಿ, ಶೋಭಾ ಕೆ, ಅವಿನಾಶ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ ಎಲ್, ರೆಡ್ ಕ್ರಾಸ್ ಅಧಿಕಾರಿ ಉದಯ ಕುಮಾರ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here