ಬಂಟ್ವಾಳ: ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ರೈ ಮಠಂತಬೆಟ್ಟು ಅವರು ಹೃದಯಾಘಾತದಿಂದ ನಿಧನ ಹೊಂದಿರುವುದು ತೀವ್ರ ದುಃಖದ ಸಂಗತಿಯಾಗಿದೆ ಎಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಸಂತಾಪ ಸೂಚಿಸಿದರು.
ನಿರಂಜನ್ ರೈ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಸಂತಾಪವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ. ರಮಾನಾಥ ರೈ, “ನಿರಂಜನ್ ರೈ ಮಠಂತಬೆಟ್ಟು ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಜನಪರ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಸಮಾಜಕ್ಕೆ ಮತ್ತು ಸಾರ್ವಜನಿಕ ಬದುಕಿಗೆ ತುಂಬಲಾರದ ನಷ್ಟವಾಗಿದೆ” ಎಂದು ಹೇಳಿದರು.








