ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದಲ್ಲಿ ಆಯ್ಕೆ ಶ್ರೇಣಿ ಉಪನ್ಯಾಸಕ ನಾಗೇಶ್ ಆಚಾರಿ ಅವರಿಗೆ ಬೀಳ್ಕೊಡುಗೆ

0

ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕ ನಾಗೇಶ್ ಆಚಾರಿ ಅವರ ವಯೋನಿವೃತ್ತಿ ಅಂಗವಾಗಿ ಕಾಲೇಜಿನ ಸಭಾಂಗಣದಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ನಾಗೇಶ್ ಆಚಾರಿ ಅವರ ಬಗ್ಗೆ ಮಾತನಾಡಿದ ಗಣ್ಯರು, ನಾಗೇಶ್ ಆಚಾರಿ ಅವರು ತಮ್ಮ ಸುದೀರ್ಘ ಸೇವಾ ಅವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಿ, ಕರ್ತವ್ಯನಿಷ್ಠೆ, ಪ್ರಾಮಾಣಿಕತೆ, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಆದರ್ಶ ಶಿಕ್ಷಕರಾಗಿ ಗುರುತಿಸಿಕೊಂಡಿದ್ದಾರೆ ಹಾಗೂ ತಾಂತ್ರಿಕ ಪರೀಕ್ಷಾ ಮಂಡಳಿ ಬೆಂಗಳೂರಲ್ಲಿ ಹಲವು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವುದು ಅವರ ಸೇವೆಯ ಶ್ರೇಷ್ಠತೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಾಗೇಶ್ ಆಚಾರಿ, ತಮ್ಮ ಸೇವಾ ಜೀವನದಲ್ಲಿ ನಿರಂತರವಾಗಿ ಸಹಕಾರ ನೀಡಿದ ತಾಂತ್ರಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಸಂಸ್ಥೆಯ ಪ್ರಾಂಶುಪಾಲರು, ಸಹೋದ್ಯೋಗಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದೊಂದಿಗಿನ ತಮ್ಮ ಒಡನಾಟ ಜೀವನಪರ್ಯಂತ ಅವಿಸ್ಮರಣೀಯವಾಗಿರಲಿದೆ ಎಂದು ತಿಳಿಸಿದರು.

ನಾಗೇಶ್ ಆಚಾರಿ ಅವರನ್ನು ಶಾಲು ಹೊದಿಸಿ, ಪುಷ್ಪಹಾರ, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರೊಂದಿಗೆ, ಸುತ್ತಮುತ್ತಲಿನ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ನಿವೃತ್ತ ಪ್ರಾಂಶುಪಾಲರು, ಹಿತೈಷಿಗಳು, ಬಂಧು-ಬಳಗದವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ, ನಾಗೇಶ್ ಆಚಾರಿ ಅವರಿಗೆ ಶುಭ ಹಾರೈಸಿದರು. ಅವರ ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ನೆಮ್ಮದಿಯಿಂದ ಕೂಡಿರಲೆಂದು ಹಾರೈಸಿದರು.

LEAVE A REPLY

Please enter your comment!
Please enter your name here