ಆಟೋ ರಿಕ್ಷಾ ಚಾಲಕರಿಂದ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಭೇಟಿ

0

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಆಟೋ ನಿಲ್ದಾಣಕ್ಕೆ ಮನವಿ

ವಿಟ್ಲ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಆಟೋ ರಿಕ್ಷಾಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ನಿಯೋಗವು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ನಿಯೋಗದ ಸದಸ್ಯರು, ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಎರಡು ಆಟೋ ರಿಕ್ಷಾ ಪಾರ್ಕಿಂಗ್ ಸ್ಥಳಗಳಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಸಾಕಾಗುತ್ತಿಲ್ಲ. ಬಸ್ ನಿಲ್ದಾಣಕ್ಕೆ ಆಗಮಿಸುವ ಸಾರ್ವಜನಿಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ತಕ್ಷಣ ಆಟೋ ಸೇವೆ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿವರಿಸಿದರು.

ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ, ಈಗಿರುವ ಎರಡು ಪಾರ್ಕಿಂಗ್ ಸ್ಥಳಗಳ ಜೊತೆಗೆ ಇನ್ನೂ ಎರಡು ಆಟೋ ರಿಕ್ಷಾ ಪಾರ್ಕಿಂಗ್ ಸ್ಥಳಗಳನ್ನು ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದರಿಂದ ಸಂಚಾರ ವ್ಯವಸ್ಥೆ ಸುಗಮಗೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಸೇವೆ ದೊರೆಯಲಿದೆ ಮತ್ತು ಚಾಲಕರ ಜೀವನೋಪಾಯಕ್ಕೂ ಅನುಕೂಲವಾಗಲಿದೆ ಎಂದು ನಿಯೋಗ ತಿಳಿಸಿತು.

ಮನವಿ ಸ್ವೀಕರಿಸಿದ ಶಾಸಕ ರಾಜೇಶ್ ನಾೖಕ್ ಅವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸಾರ್ವಜನಿಕರಿಗೂ ಆಟೋ ಚಾಲಕರಿಗೂ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು. ಅಗತ್ಯವಿದ್ದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೆಚ್ಚುವರಿ ಆಟೋ ಪಾರ್ಕಿಂಗ್ ಸ್ಥಳಗಳನ್ನು ಮಂಜೂರು ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ಪದಾಧಿಕಾರಿಗಳು, ಹಿರಿಯ ಚಾಲಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದು, ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಶಾಸಕರಿಗೆ ಒತ್ತಾಯಿಸಿದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here