ಬಂಟ್ವಾಳ: ಸಣ್ಣ ಪುಟ್ಟ ವಿಷಯಗಳಿಗೂ ಜಗಳಾಡುವ ದಂಪತಿಗಳು ದಾಂಪತ್ಯ ಜೀವನವನ್ನು ಮುಂದುವರಿಸಲು ಇಷ್ಟಪಡದೆ ವಿಚ್ಛೇದನದ ತೀರ್ಮಾನಕ್ಕೆ ಬರುತ್ತಿದ್ದಾರೆ. ಹೆಚ್ಚು ಶಿಕ್ಷಣ ಪಡೆದವರಲ್ಲಿ ಈ ಸಂಖ್ಯೆ ಜಾಸ್ತಿಯಾಗುತ್ತಿದೆ. ನಮಗೆ ಅರಿವಿಲ್ಲದೆ ಪಾಶ್ಚಾತ್ಯ ಸಂಸ್ಕೃತಿ ನಮ್ಮ ಬದುಕಿನಲ್ಲಿ ಪ್ರಭಾವ ಬೀರುತ್ತಿರುವುದು ಇಂತಹ ಅನಾಹುತಗಳಿಗೆ ಕಾರಣ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಅಭಿಪ್ರಾಯಪಟ್ಟರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರು ಮಹಿಳಾ ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬ್ಯಾರಿ ಸಾಹಿತ್ಯ ಕಮ್ಮಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾತೃಭಾಷಾ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅನೇಕ ಸಮಸ್ಯೆ, ಸವಾಲುಗಳಿಂದ ಪಾರಾಗಲು ಸಾಧ್ಯ. ಬ್ಯಾರಿಗಳು ಇದನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಅವರು ವಿದ್ಯಾರ್ಥಿನಿಯರಿಗೆ ಮನವಿ ಮಾಡಿದರು. ಮೆಲ್ಕಾರು ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್., ಪ್ರಾಧ್ಯಾಪಕಿ ಶಹನಾಝ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬೂಬಕರ್ ಅನಿಲಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಿಕ್ಷಕಿ ಮತ್ತು ಕವಯಿತ್ರಿ ಆಯಿಶಾ ಯು.ಕೆ. ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದ ಸಂಚಾಲಕಿ, ಅಕಾಡೆಮಿ ಸದಸ್ಯೆ ಶಮೀರಾ ಜಹಾನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶಾಕಿರಾ ಕಿರಾಅತ್ ಪಠಿಸಿದರು. ಹಲೀಮತ್ ತಫ್ಹೀಮ್ ವಂದಿಸಿದರು. ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷೆ ಖತೀಜಾ ನಝೀಲ ಕಾರ್ಯಕ್ರಮ ನಿರೂಪಿಸಿದರು.








